Urban Development Minister Dr. Yathindra Siddaramaiah participated in felicitation ceremonies in Bidar.

ಬೀದರ್ನಲ್ಲಿ ಅಭಿನಂದನಾ ಸಮಾರಂಭಗಳಲ್ಲಿ ಭಾಗವಹಿಸಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೀದರ್, ಆಗಸ್ಟ್ 4: ಬೀದರ್ ಜಿಲ್ಲಾ ಪ್ರವಾಸದ ಅಂಗವಾಗಿ ಇಂದು ಚಿತ್ತಾ ರಸ್ತೆಯಲ್ಲಿರುವ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಶಿವಾಜಿನಗರದ ಗೋರನಳ್ಳಿಯ ದಾಸಶ್ರೇಷ್ಠ ಕನಕದಾಸ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಅಭಿನಂದನಾ ಸಮಾರಂಭಗಳಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಚಿವರು, ಬಳಿಕ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ತಮ್ಮ ಮೇಲೆ ತೋರಿದ ಪ್ರೀತಿ, ವಿಶ್ವಾಸ ಮತ್ತು ಆತ್ಮೀಯ ಸನ್ಮಾನಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಜನರ ಆಶೀರ್ವಾದ ಮತ್ತು ವಿಶ್ವಾಸವೇ ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಹಾಗೂ ಜನಸೇವೆಗೆ ಹೆಚ್ಚಿನ ಬದ್ಧತೆಯೊಂದಿಗೆ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶ್ರೀ ರಹೀಂ ಖಾನ್, ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅಮೃತರಾವ್ ಚಿಮಕೋಡೆ, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
