Hokrani village today c. Meet Narendra; Condolences to the family of deceased Ashwini

ಹೊಕ್ರಾಣಿ ಗ್ರಾಮಕ್ಕೆ ಇಂದು ಸಿ. ನರೇಂದ್ರ ಭೇಟಿ; ಮೃತ ಅಶ್ವಿನಿ ಕುಟುಂಬಕ್ಕೆ ಸಾಂತ್ವನ

ಬೆಂಗಳೂರು, ಆ.29: ಇತ್ತೀಚೆಗೆ ಅತ್ಯಾಚಾರ ಎಸಗಿ ಕೊಲೆ ಮಾಡಿ, ಬಳಿಕ ಶವವನ್ನು ಬಾವಿಗೆ ಎಸೆದಿರುವ ಘಟನೆ ನಡೆದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಮೃತ ಅಶ್ವಿನಿ ನಿವಾಸಕ್ಕೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ ಅವರು ಇಂದು ಭೇಟಿ ನೀಡಲಿದ್ದಾರೆ.
ಭಾನುವಾರ ಬೆಳಗ್ಗೆ ಅಶ್ವಿನಿ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತಳ ತಂದೆ-ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿ. ನರೇಂದ್ರ ಅವರು, “ಬದುಕಿ ಬಾಳಬೇಕಿದ್ದ ಹೆಣ್ಣುಮಗಳಾದ ಅಶ್ವಿನಿಯನ್ನು ಕಾಮುಕರು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಬಾವಿಗೆ ಎಸೆದಿರುವ ಘಟನೆ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡದ ಮೂಲಕ ಕಾರ್ಯೋನ್ಮುಖವಾಗಿದೆ ಎಂದು ಅವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದರು.
ವಿಶೇಷವಾಗಿ ರಾಯಚೂರು ಜಿಲ್ಲೆಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ಮೂರು ಬರ್ಬರ ಕೊಲೆ ಪ್ರಕರಣಗಳು ನಡೆದಿರುವುದು ಅತ್ಯಂತ ವಿಷಾದನೀಯ ಹಾಗೂ ಕಳವಳಕಾರಿ ಸಂಗತಿಯಾಗಿದೆ ಎಂದು ಸಿ. ನರೇಂದ್ರ ಅಭಿಪ್ರಾಯಪಟ್ಟರು.
ಹೊಕ್ರಾಣಿ ಗ್ರಾಮದ ಅಶ್ವಿನಿ ಕುಟುಂಬಕ್ಕೆ ನ್ಯಾಯ ದೊರಕಬೇಕು. ಇಂತಹ ಅಮಾನವೀಯ ಕೃತ್ಯ ಎಸಗಿದವರಿಗೆ ಕಠಿಣಾತಿಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಅವರು ಆಗ್ರಹಿಸಿದರು.

