

Appeal to the District Magistrate to cancel the inclusion of Basavadi refugees and Hindus in Gangavati.
ಗಂಗಾವತಿಯಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ
ಕನ್ನೇರಿ ಸ್ವಾಮಿಯ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬಸವತತ್ವ ಸಂಘಟನೆಗಳ ಆಗ್ರಹ

ಕೊಪ್ಪಳ: ಗಂಗಾವತಿ ನಗರದಲ್ಲಿ ನವೆಂಬರ್ 3, 2026ರಂದು ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಯ ನೇತೃತ್ವದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ರದ್ದುಗೊಳಿಸಬೇಕು ಹಾಗೂ ಸ್ವಾಮಿಯವರ ಕೊಪ್ಪಳ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಬಸವತತ್ವ ಸಂಘಟನೆಗಳ ಪದಾಧಿಕಾರಿಗಳು

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಯವರು ಬಸವ ಸಂಸ್ಕೃತಿ ಅಭಿಯಾನ ಹಾಗೂ ಲಿಂಗಾಯತ ಮಠಾಧಿಪತಿಗಳ ಕುರಿತು ಈ ಹಿಂದೆ ಅವಹೇಳನಕಾರಿ, ಅಶ್ಲೀಲ ಮತ್ತು ಅಸಂವಿಧಾನಿಕ ಪದಗಳನ್ನು ಬಳಸಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಬಸವತತ್ವದ ಕುರಿತು ಅಪಪ್ರಚಾರ ಮಾಡುತ್ತಿದ್ದು, ಲಿಂಗಾಯತ ಧರ್ಮದ ಮೂಲ ಆಶಯಗಳನ್ನು ತಿರುಚುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಂಘಟನೆಗಳು ದೂರಿವೆ.
ನವೆಂಬರ್ 3ರಂದು ಗಂಗಾವತಿಯಲ್ಲಿ ನಡೆಯಲಿರುವ ಸಮಾವೇಶದ ಮೂಲಕ ಮತ್ತೆ ಬಸವತತ್ವಕ್ಕೆ ಧಕ್ಕೆ ಉಂಟುಮಾಡುವ ಹಾಗೂ ಲಿಂಗಾಯತ ಧರ್ಮದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುವ ಆತಂಕವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಬಸವತತ್ವ ಅನುಯಾಯಿಗಳನ್ನು ಅವಹೇಳನ ಮಾಡುವುದು ಮತ್ತು ಮಹಿಳೆಯರ ಕುರಿತು ಅವಾಚ್ಯ ಪದಗಳನ್ನು ಬಳಸುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಸಂಘಟನೆಗಳು ಆರೋಪಿಸಿವೆ.
ಈ ಕಾರ್ಯಕ್ರಮದಿಂದ ಸಮಾಜದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದ್ದು, ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಮತ್ತು ಶಾಂತಿ ಭಂಗ ಉಂಟಾಗುವ ಆತಂಕವಿದೆ. ಆದ್ದರಿಂದ ಜಿಲ್ಲಾಡಳಿತವು ತಕ್ಷಣ ಮಧ್ಯಪ್ರವೇಶಿಸಿ ಸಮಾವೇಶಕ್ಕೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಬೇಕು.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕನ್ನೇರಿ ಸ್ವಾಮಿಯವರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಕೊಪ್ಪಳ ಹಾಗೂ ವಿವಿಧ ಬಸವತತ್ವ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.



