

ಮರಳಿ ಗ್ರಾಮದಲ್ಲಿ ನ. 7ರಂದು ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ
Hobali-level public service movement in Marali village on the 7th
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ; ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿ
ಗಂಗಾವತಿ: ತಾಲ್ಲೂಕಿನ ಮರಳಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ವಿವಿಧ ಇಲಾಖೆಗಳ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ನವೆಂಬರ್ 7ರಂದು ಮರಳಿ ಗ್ರಾಮದಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಮರಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ಕುಡಿಯುವ ನೀರು, ರಸ್ತೆ, ಚರಂಡಿ, ಕಂದಾಯ, ಪಿಂಚಣಿ, ವಿದ್ಯುತ್, ಪೊಲೀಸ್ ಹಾಗೂ ಇತರೆ ಇಲಾಖೆಗಳ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ನೇರವಾಗಿ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ನಿಯಮಾನುಸಾರ ತ್ವರಿತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.
ಆದ್ದರಿಂದ ಮರಳಿ ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಜಾಸೇವಾ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗಂಗಾವತಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



