
Demand to repeal the anti-conversion law
Appeal submitted to MLA Gali Janardhana Reddy by Christian and minority community leaders

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹ
ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕ್ರಿಶ್ಚಿಯನ್ ಹಾಗೂ ಅಲ್ಪಸಂಖ್ಯಾತ ಮುಖಂಡರಿಂದ ಮನವಿ

ಗಂಗಾವತಿ: ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ. ಪ್ರತಿಯೊಬ್ಬರೂ ತಮ್ಮ ಇಚ್ಛೆಯ ಧರ್ಮವನ್ನು ಅನುಸರಿಸುವ ಹಾಗೂ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಸಂವಿಧಾನಬದ್ಧವಾಗಿ ರಕ್ಷಿಸಬೇಕು. ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವಂತೆ ಗಂಗಾವತಿಯ ಕ್ರಿಶ್ಚಿಯನ್ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಬುಧವಾರ ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ಶಾಸಕರ ಕೊಠಡಿಗೆ ಆಗಮಿಸಿದ ಮುಖಂಡರು, ಶಾಸಕರ ಆಪ್ತ ಕಾರ್ಯದರ್ಶಿ ಮೂಲಕ ಮನವಿ ಪತ್ರ ಸಲ್ಲಿಸಿದರು.
ಮತಾಂತರ ನಿಷೇಧ ಕಾಯ್ದೆಯಿಂದ ಕ್ರಿಶ್ಚಿಯನ್ ಸಮುದಾಯದ ಪಾದ್ರಿಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಅನಗತ್ಯ ಆರೋಪ ಮತ್ತು ಕಿರುಕುಳಗಳನ್ನು ಎದುರಿಸುವಂತಾಗಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಹಾಗೂ ಧಾರ್ಮಿಕ ಸಂಘರ್ಷಗಳಿಗೆ ಅವಕಾಶ ಉಂಟಾಗುತ್ತಿದೆ ಎಂದು ಮುಖಂಡರು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಭಾರತದ ಬಹುಧರ್ಮೀಯ ಸಂಸ್ಕೃತಿ ಮತ್ತು ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಆಶಯಗಳನ್ನು ಗೌರವಿಸಬೇಕು. ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಇಚ್ಛೆಯ ಧರ್ಮವನ್ನು ಆಯ್ಕೆ ಮಾಡಿಕೊಂಡು ಅನುಸರಿಸುವ ಹಕ್ಕನ್ನು ರಕ್ಷಿಸಬೇಕು. ಆದ್ದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳದ ಡಿ. ಅನಿಲ್ ಕುಮಾರ್ ಗುರುಗಳು, ವೀರೇಶ್ ಡಿ.ಎಲ್., ವಿಜಯ, ಡಾ. ಜಾನ್, ನವೀನ್ ಕುಮಾರ್, ಯಾಕೋಬ, ಡ್ಯಾನಿಯಲ್, ಸುರೇಶ್ ಬಾಬು, ಸಾಬ್ ಅನಿಲ್ ಕುಮಾರ್, ರೋಜಿ, ಆಶಾದಿ, ಜ್ಯೋತಿ, ದೇವಣ್ಣ, ಜೀವಪ್ರಕಾಶ್ ಸೇರಿದಂತೆ ಕ್ರಿಶ್ಚಿಯನ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.



