
Indefinite state-level protest by ASHA workers starting November 17
ನವೆಂಬರ್ 17ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ರಾಜ್ಯಮಟ್ಟದ ಹೋರಾಟ


ಕನಿಷ್ಠ 15 ಸಾವಿರ ರೂ. ನಿಶ್ಚಿತ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಕೊಪ್ಪಳ: ಕನಿಷ್ಠ 15 ಸಾವಿರ ರೂ. ಮಾಸಿಕ ನಿಶ್ಚಿತ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ನೇತೃತ್ವದಲ್ಲಿ ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಡಾ. ಪ್ರಮೋದ್ ತಿಳಿಸಿದರು.
ಕೊಪ್ಪಳದಲ್ಲಿ ಹೋರಾಟದ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ, ಇಷ್ಟೆಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ ಅವರಿಗೆ ಗೌರವಯುತವಾದ ನಿಶ್ಚಿತ ವೇತನ ನೀಡದೆ, ಅಲ್ಪ ಪ್ರಮಾಣದ ಗೌರವಧನ ಮತ್ತು ಪ್ರೋತ್ಸಾಹಧನದ ಆಧಾರದಲ್ಲಿ ದುಡಿಸಿಕೊಳ್ಳಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವಲ್ಲಿ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಪ್ರಮುಖ ಬೇಡಿಕೆಗಳು:
ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 15 ಸಾವಿರ ರೂ. ಮಾಸಿಕ ನಿಶ್ಚಿತ ಗೌರವಧನ ನಿಗದಿಪಡಿಸಬೇಕು. ಸಮಸ್ತ ಆ್ಯಪ್ ಸೇರಿದಂತೆ ಮೊಬೈಲ್ ಆಧಾರಿತ ಕೆಲಸಗಳನ್ನು ಬಲವಂತವಾಗಿ ಮಾಡಿಸುವುದನ್ನು ಕೈಬಿಡಬೇಕು. ಮೊಬೈಲ್ ಮೂಲಕ ಕೆಲಸ ಮಾಡಿಸಿಕೊಳ್ಳುವುದಾದರೆ ಅಗತ್ಯ ಸ್ಮಾರ್ಟ್‌ಫೋನ್ ಹಾಗೂ ಸೂಕ್ತ ಪ್ರೋತ್ಸಾಹಧನ ಒದಗಿಸಬೇಕು. ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.
ಅನಾರೋಗ್ಯದ ಸಂದರ್ಭದಲ್ಲಿ ಮೂರು ತಿಂಗಳ ವೇತನ ಸಹಿತ ರಜೆ ನೀಡಬೇಕು. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಆಶಾ ನಿಧಿಯನ್ನು ಸಮರ್ಪಕವಾಗಿ ಕಾರ್ಯಕರ್ತೆಯರಿಗೆ ತಲುಪಿಸಬೇಕು. ಸೇವಾ ನಿವೃತ್ತಿಯ ಸಂದರ್ಭದಲ್ಲಿ ಕನಿಷ್ಠ 5 ಲಕ್ಷ ರೂ. ಪರಿಹಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು ಆರೋಗ್ಯ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದರೂ, ಅವರ ಬದುಕಿನ ಭದ್ರತೆ ಮತ್ತು ಹಕ್ಕುಗಳ ರಕ್ಷಣೆಗೆ ಸರ್ಕಾರಗಳು ಗಂಭೀರ ಗಮನ ನೀಡುತ್ತಿಲ್ಲ. ಆದ್ದರಿಂದ ರಾಜ್ಯದ ಎಲ್ಲ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ಹೋರಾಟದಲ್ಲಿ ಪಾಲ್ಗೊಂಡು, ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಅನಿರ್ದಿಷ್ಟಾವಧಿ ಧರಣಿಯನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ, ಗಂಗಾವತಿ ನಗರ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಆಚಾರ್, ದ್ರಾಕ್ಷಾಯಣಿ, ಸವಿತಾ ಹಡಪದ, ರಜಿಯಾ ಬೇಗಂ, ಶಕುಂತಲಾ, ರೇಣುಕಾ, ಗಂಗಮ್ಮ, ನೀಲಾವತಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.



