
Education is the weapon for building a society based on equality—as envisioned by Babasaheb: Minister Dr. Yathindra Siddaramaiah.

ಬಾಬಾಸಾಹೇಬರ ಆಶಯದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಅಸ್ತ್ರ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು, ನ.15: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಾಮಾಜಿಕ ನ್ಯಾಯ ಹಾಗೂ ಸಮಾನತೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಮೈಸೂರು ವಿಭಾಗದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ವಿಶೇಷ ಸೇವೆ ಸಲ್ಲಿಸಿದ ಮಹನೀಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು
ಶತಮಾನಗಳಿಂದ ಶೋಷಣೆ ಮತ್ತು ನೋವನ್ನು ಅನುಭವಿಸಿರುವ ಸಮುದಾಯದ ಯುವಜನರಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಹಾಗೂ ಸಾಧನೆಯ ಮನೋಭಾವವನ್ನು ಬೆಳೆಸುವ ಕೆಲಸ ಇಂತಹ ಕಾರ್ಯಕ್ರಮಗಳ ಮೂಲಕ ನಡೆಯುತ್ತಿರುವುದು ಶ್ಲಾಘನೀಯ. ಇಂದು ನಾವು ಸಮಾಜದ ವಿವಿಧ ಉನ್ನತ ಸ್ಥಾನಮಾನಗಳಲ್ಲಿ ಗುರುತಿಸಿಕೊಳ್ಳಲು ಮತ್ತು ನಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಲು ಸಾಧ್ಯವಾಗಿರುವುದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಪ್ರಮುಖ ಕಾರಣವಾಗಿದೆ ಎಂದರು.
ದೇಶದಲ್ಲಿ ಜಾತೀಯತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಅದು ಇಂದಿಗೂ ವಿವಿಧ ರೂಪಗಳಲ್ಲಿ ಚಾಲ್ತಿಯಲ್ಲಿದೆ. ಸಮಾಜದಲ್ಲಿ ನಿಜವಾದ ಸಮಾನತೆ ಇನ್ನೂ ಸಾಧಿಸಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಉನ್ನತ ಶಿಕ್ಷಣ ಪಡೆದು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು. ಹಿಂದುಳಿದ ಸಮುದಾಯಗಳಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮಾನತೆ ನೆಲೆಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಬಾಬಾಸಾಹೇಬರು ಹೇಳಿದಂತೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತತ್ವಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಶಿಕ್ಷಣವು ನಮ್ಮನ್ನು ಸಬಲರನ್ನಾಗಿಸುತ್ತದೆ, ಸಂಘಟನೆ ನಮ್ಮ ಶಕ್ತಿಯನ್ನು ಹೆಚ್ಚಿಸುತ್ತದೆ, ಹೋರಾಟವು ನ್ಯಾಯಯುತ ಹಕ್ಕುಗಳನ್ನು ಪಡೆಯಲು ಮಾರ್ಗದರ್ಶನ ನೀಡುತ್ತದೆ. ವೈಯಕ್ತಿಕವಾಗಿ ಉನ್ನತ ಸಾಧನೆ ಮಾಡಿದವರು ತಮ್ಮ ಸಮುದಾಯದ ಇತರರ ಏಳಿಗೆಗೂ ಶ್ರಮಿಸಬೇಕು. ಮುಂದಿನ ಪೀಳಿಗೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಶೈಕ್ಷಣಿಕವಾಗಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಚಿವರು ಗೌರವಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ‘ಇವನಾರವ’ ಚಲನಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉರಿಲಿಂಗ ಪೆದ್ದಿ ಮಠದ ಆಯುಷ್ಮಾನ್ ಜ್ಞಾನಪ್ರಕಾಶ ಸ್ವಾಮೀಜಿ, ಜೇತವನ ಬುದ್ಧ ವಿಹಾರದ ಆಯುಷ್ಮಾನ್ ಮನೋರಖಿತ ಬಂತೇಜಿ, ವಿಶ್ವಮೈತ್ರಿ ಬುದ್ಧ ವಿಹಾರದ ಆಯುಷ್ಮಾನ್ ಡಾ. ಕಲ್ಯಾಣಸಿರಿ ಬಂತೇಜಿ, ಹೆಚ್.ಡಿ.ಕೋಟೆ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಆಯುಷ್ಮಾನ್ ಡಾ. ಡಿ. ಚಂದ್ರಶೇಖರಯ್ಯ, ಮೈಸೂರು ಜಿಲ್ಲಾಧ್ಯಕ್ಷರಾದ ಆಯುಷ್ಮಾನ್ ಡಾ. ಎಂ.ಡಿ. ಶಿವರಾಮಕೃಷ್ಣ ಸೇರಿದಂತೆ ಹಲವು ಅಂಬೇಡ್ಕರ್ವಾದಿಗಳು, ಸಮುದಾಯದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.



