
Meeting of the District Disaster Management Authority

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿ: ಡಾ.ಸುರೇಶ ಬಿ.ಇಟ್ನಾಳ
ಕೊಪ್ಪಳ, ನವೆಂಬರ್ 16, : ನಗರ ಪ್ರದೇಶ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಹಾಗೂ ದನ-ಕರು, ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಇದರಲ್ಲಿ ನಿರ್ಲಕ್ಷö್ಯತನ ತೋರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯ ಕೊರತೆ ಹಾಗೂ ಬರದ ಹಿನ್ನೆಲೆಯಲ್ಲಿ ಎಲ್ಲ ಕಡೆಗೂ ಅಂತರ್ಜಲ ಮಟ್ಟ ಕುಸಿದಿದೆ. ಹೊಸ ಬೋರ್ವೆಲ್ ಕೊರೆದರೂ ನೀರು ಸಿಗುವ ನಂಬಿಕೆ ಇಲ್ಲ. ಆದ್ದರಿಂದ ಇರುವ ಹಾಗೂ ಲಭ್ಯ ನೀರಿನ ಸಂಪನ್ಮೂಲಗಳನ್ನು ಜಾಣ್ಮೆಯಿಂದ ಬಳಸಿಕೊಳ್ಳಿ. ಜನರಿಗೆ ಹಾಗೂ ದನ ಕರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಅಲ್ಲದೆ ಅರಣ್ಯ ಪ್ರದೇಶದಲ್ಲಿಯೂ ಕಾಡು ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಮುಖ್ಯ. ಟ್ಯಾಂಕರ್ ಅಥವಾ ಪರ್ಯಾಯ ಮೂಲಗಳಿಂದ ನೀರಿನ ಆಕರಗಳನ್ನು, ಸಂಗ್ರಾಹಕಗಳನ್ನು ತುಂಬಿಸಿ. ಇದರೊಂದಿಗೆ ಸಾರ್ವಜನಿಕರಲ್ಲಿ ಬರಗಾಲದ ಭೀಕರತೆ ಹಾಗೂ ನೀರಿನ ಸದ್ಭಳಕೆ ಕುರಿತು ಜಾಗೃತಿ ಮೂಡಿಸಿ ಎಂದು ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರರು, ತಾಲೂಕು ಪಂಚಾಯತಿ ಇಒ ಗಳು, ಪಿಡಿಒ ಗಳು, ವಿಎ ಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಬಿಸಿಲಿನ ತೀವ್ರತೆ ಹೆಚ್ಚುವುದರಿಂದ ಪ್ರತಿಯೊಬ್ಬರಿಗೂ, ಪ್ರತಿಯೊಂದು ಪ್ರಾಣಿಗೂ ನೀರು ಬಹಳ ಮುಖ್ಯ. ಅದರಂತೆ ಪೂರೈಕೆಯಾಗುವ ನೀರು, ಕೆರೆಗಳು ಕಲುಷಿತವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ ನೀರು ಪೂರೈಕೆ ಮಾಡಬೇಕು ಎಂದು ಅವರು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮವಾರು ರೈತರ ಬೇಡಿಕೆ ಅನುಸಾರ ಮೇವು ಕಿಟ್ ಒದಗಿಸಲು ವರದಿ ಸಿದ್ದಪಡಿಸಿ. ಟೆಂಡರ್ ಪ್ರಕ್ರಿಯೆ ಬೇಗ ಪೂರ್ಣಗೊಳಿಸಿ. ಮುಂದಿನ ಮಳೆಗಾಲದವರೆಗೂ ಮೇವಿನ ಅಗತ್ಯವಿರುವುದರಿಂದ ಅದಕ್ಕೆ ತಕ್ಕಂತೆ ಯೋಜನೆ ರೂಪಿಸಿ ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗೆ ತಿಳಿಸಿದರು.
ಸಭೆಯಲ್ಲಿ ಡಿಎಫ್ಒ ನಿರ್ಮಲಾ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಮಹಮ್ಮದ್ ಜಿಲಾನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


